ಬೆಂಗಳೂರು: ಪ್ರತಿದಿನ 5 ಸಾವಿರ ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಇಂದು (ಸೆ.26) ಬೆಂಗಳೂರು ಬಂದ್ ಗೆ ಕರೆ ನೀಡಿದೆ.ಬೆಳಗ್ಗೆ 6 ಗಂಟೆಗೆ ಆರಂಭವಾದ ಬೆಂಗಳೂರು ಬಂದ್ ಸಂಜೆ 6 ಗಂಟೆಯವರೆಗೆ ಮುಂದುವರಿಯಲಿದೆ. ಈ ಬಂದ್ ಗೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ನೀಡಿರುವುದು ಕಾವು ಹೆಚ್ಚಿಸಿದೆ.ಬಂದ್ ಗೆ ಅವಕಾಶವಿಲ್ಲ ಎಂದು ಪೊಲೀಸರು ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಕುರುಬೂರು ಶಾಂತಕುಮಾರ್ ಅವರನ್ನು ವಶಕ್ಕೆ ಪಡೆದರು.ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ರೈತರು ಮತ್ತು ಕನ್ನಡಪರ ಸಂಘಟನೆಗಳು ಬಂದ್ ನಡೆಸುತ್ತಿವೆ. ಕರ್ಫ್ಯೂ ಉಲ್ಲಂಘಿಸಿ ವಿಧಾನಸೌಧದಿಂದ ರಾಜಭವನದತ್ತ ಮೆರವಣಿಗೆ ನಡೆಸಿದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ ಸೇರಿದಂತೆ 200ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಸರ್ಕಾರವು ತಮ್ಮ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.