ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಸಮಸ್ಯೆ ಬಗೆಹರಿಸಲು ವಾರದೊಳಗೆ ಗೃಹಲಕ್ಷ್ಮಿ ಅದಾಲತ್ ಸ್ಥಾಪಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ. ಬಾಲ ಭವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಸಮಾರಂಭದ ಬಳಿಕ ಮಾತನಾಡಿದ ಅವರು ಈಗಾಗಲೇ 1 ಕೋಟಿ 10 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಿದ್ದು. ಹಲವು ಮಹಿಳೆಯರಿಗೆ ಹಣ ತಲುಪದೇ ಇರುವ ಕಾರಣದಿಂದ ಈ ಅದಾಲತ್ ನಡೆಯಲಿದ್ದು, ಪಿಡಿಒ, ಅಂಗನವಾಡಿ ಕಾರ್ಯಕರ್ತೆಯರು, ಆಯಾ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಭೆ ನಡೆಸಿ ಫಲಾನುಭವಿಗಳ ಸಮಸ್ಯೆಯನ್ನು ಬಗೆಹರಿಸುವಂತೆ ಸಚಿವರು ಸೂಚಿಸಿದ್ದಾರೆ. ಈ ಯೋಜನೆಯನ್ನು 100% ಅನುಷ್ಠಾನಗೊಳಿಸಲು ಸರ್ಕಾರ ಪ್ಲಾನ್ ಮಾಡಿದೆ.ಈಗಾಗಲೇ ಮೂರು ಕಂತಿನ ದುಡ್ಡು ಬಾರದೇ ಇದ್ದವರಿಗೆ ಏಕಕಾಲಕ್ಕೆ ಆರು ಸಾವಿರ ದುಡ್ಡು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಅಂದಾಜು 50 ಸಾವಿರ ತೆರಿಗೆದಾರರು ಕೂಡ ಅರ್ಜಿ ಹಾಕಿದ್ದು ಆ ಅರ್ಜಿಗಳನ್ನು ನಿರಾಕರಿಸಿ ಡಿಲಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್(Adalat) ಆಯೋಜಿಸಿ ಗೃಹಲಕ್ಷ್ಮಿಗೆ ಸಂಬಂಧಿಸಿದ ಸಮಸ್ಯೆ ಇದ್ದರೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಕೆಲವೇ ದಿನಗಳಲ್ಲಿ ಈ ಕಾರ್ಯ ವಿಧಾನ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ಸಹಾಯ ಸಿಗುವಂತೆ ಕ್ರಮ ಕೈಗೊಳ್ಳಬೇಕು. ಗೃಹಲಕ್ಷ್ಮಿ ಯೋಜನೆಯಡಿ ಹಣ ಬಂದಿಲ್ಲ ಎನ್ನುವ ಆರೋಪ ಬಾರದಂತೆ ನೋಡಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ.ಸಿ.ಪ್ರಕಾಶ್ ನಿರ್ದೇಶಕಿ ಎಂ.ಎಸ್. ಅರ್ಚನಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.