ಬೆಂಗಳೂರು ಮಾರ್ಚ್ 14 ;ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಇಂದಿನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಿಸಲು ಆರಂಭಿಸಿದೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಆದ್ರೆ ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಟೋಲ್ ಗೇಟ್ ಮುರಿದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.
ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ. ಹಾಲಿನ ಕ್ಯಾನ್ ಹಿಡಿದು, ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ. ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯಾಗಿದ್ದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಕೆ ಬಳಿಯ ಟೋಲ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 3 ಕೆಎಸ್ಆರ್ಪಿ ತುಕಡಿ, ಸ್ಥಳೀಯ ಪೊಲೀಸರ ನಿಯೋಜನೆ ಮಾಡಲಾಗಿದೆ. ಬಿಡದಿ ಶೇಷಗಿರಿಹಳ್ಳಿಯಲ್ಲಿ ಟೋಲ್ ಸಂಗ್ರಹ ಶುರುವಾಗಿದ್ದು, ಮೈಸೂರು ಕಡೆಯಿಂದ ಬರುವ ವಾಹನಗಳಿಗೆ ಟೋಲ್ ಬಿಸಿ ತಟ್ಟಿದೆ. ಕಣಮಿಣಕಿ ಟೋಲ್ ನಲ್ಲಿ ಆರಂಭದಲ್ಲೆ ತಾಂತ್ರಿಕ ದೋಷ ಪತ್ತೆಯಾಗಿದೆ. ಕೆಲ ಬೂತ್ ಗಳಲ್ಲಿ ಫಾಸ್ಟ್ ಟ್ಯಾಗ್ ವರ್ಕ್ ಆಗದೇ ವಾಹನ ಸವಾರರು ಪರದಾಡಿದರು. ಫಾಸ್ಟ್ ಟ್ಯಾಗ್ ಇಲ್ಲದಿದ್ದರೆ ಡಬಲ್ ದರ ಕಟ್ಟಬೇಕಾಗುತ್ತದೆ.
ಕಾರುಗಳಿಗೆ ಒಂದು ದಾರಿಯ ಪ್ರಯಾಣಕ್ಕೆ 135 ರೂ. ಟೋಲ್ ಶುಲ್ಕ ವಿಧಿಸಲಾಗುತ್ತದೆ ಮತ್ತು ಅದೇ ದಿನ ಹಿಂತಿರುಗಿದರೆ 205 ರೂ. ವಿಧಿಸಲಾಗುತ್ತದೆ. ಲಘು ವಾಣಿಜ್ಯ ವಾಹನಗಳು, ಲಘು ಸರಕು ವಾಹನ, ಮಿನಿ ಬಸ್ಗಳಿಗೆ ಏಕಮುಖ ಸಂಚಾರಕ್ಕೆ 220 ರೂಪಾಯಿ ನಿಗದಿಪಡಿಸಲಾಗುತ್ತದೆ. ಎರಡು ಕಡೆಯ ಪ್ರಯಾಣಕ್ಕೆ 330 ರೂಪಾಯಿ ನೀಡಬೇಕು.