ಬೆಂಗಳೂರು: ಮೇ:27;ರಾಜ್ಯದಲ್ಲಿ ಜಾರಿಯಲ್ಲಿದ್ದ ಚುನವಾಣಾ ನೀತಿ ಸಂಹಿತೆಯ ಸಲುವಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿಸಲ್ಲಿಸಲು ಪೋರ್ಟಲ್ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಆದರೆ ಚುನಾವಣಾ ಆಯೋಗವು ನೀತಿ ಸಂಹಿತೆಯನ್ನು ಮುಕ್ತಯ ಮಾಡಿದ್ದರಿಂದ ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಪಡಿತರ ಚೀಟಿ ವಿತರಿಸುವ ಸಲುವಾಗಿ ಅರ್ಜಿ ಸಲ್ಲಿಸಲು ಜೂನ್ 01 ರಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ಕಾಂಗ್ರೇಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ಹತ್ತು ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸುವುದಾಗಿ ಭರವಸೆ ನೀಡಿತ್ತು ಇದರಿಂದಾಗಿ ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳಿಗೆ ಬೇಡಿಕೆ ಹೆಚ್ಚಿ ಅನ್ನ ಭಾಗ್ಯ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಲಿದೆ.
ಕಾಂಗ್ರೇಸ್ ಪಕ್ಷವು ತನ್ನ ಚುನಾವಣಾ ಪ್ರಚಾರದ ವೇಳೆಯಲ್ಲಿ ನೀಡಿರುವ ಐದು ಗ್ಯಾರಂಟಿ ಭರವಸೆಗಳ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿಯನ್ನು ಮಾನದಂಡವಾಗಿ ನಿಗದಿ ಪಡಿಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಕಾಂಗ್ರೇಸ್ ಅಧಿಕಾರಕ್ಕೆ ಬಂದ ದಿನದಿಂದ ಹಲವಾರು ಜನರು ಬಿಪಿಎಲ್ ಪಡಿತರ ಚೀಟಿಗಾಗಿ ಆಹಾರ ಇಲಾಖೆ ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲದೇ ತಮ್ಮ ಕುಟುಂಬದ ಮಹಿಳೆಯ ಹೆಸರನ್ನೆ ಪಡಿತರ ಚೀಟಿಯ ಮುಂಭಾಗದಲ್ಲಿ ಅಂದರೆ ಯಜಮಾನಿಯಾಗಿ ಪರಿಗಣಿಸುವಂತೆ ಬೇಡಿಕೆ ಇಡುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹೆಚ್ಚುವರಿ ನಿರ್ದೇಶಕ ಜಿ. ಗ್ಯಾನೇಂದ್ರ ಕುಮಾರ್ ಗಂಗ್ವಾರ್, ‘ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಲಾಗಿತ್ತು. ಈ ಹಿಂದೆಯೇ ಮಂಜೂರಾದ ಪಡಿತರ ಚೀಟಿಗಳ ವಿತರಣೆ ಪ್ರಗತಿಯಲ್ಲಿದೆ. ಆದ್ದರಿಂದ ಜೂನ್ 01 ರಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸ್ವೀಕರಿಸಲಾಗುವುದು ಹಾಗೂ ಸ್ವೀಕರಿಸಿದ ಅರ್ಜಿಗಳ ಮಂಜೂರಾತಿಗೆ ಸರ್ಕಾರದ ಮುಂದೆ ಪ್ರಸ್ತಾವ ಸಲ್ಲಿಸಲಾಗುವು ಎಂದು ಹೇಳಿದರು.