ಬೆಂಗಳೂರು;ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ಇಂದು ದೆಹಲಿಯಲ್ಲಿ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳು, ಕಾಂಗ್ರೆಸ್ ಮುಖ್ಯಸ್ಥರು ಮತ್ತು ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಜಾತಿ ಗಣತಿ ನಡೆಸುವ ಬಗ್ಗೆ, ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣಾ ತಯಾರಿ ಬಗ್ಗೆ ಚರ್ಚೆ ನಡೆಯಲಿದೆ.ಸಿಡಬ್ಲ್ಯುಸಿ ಪುನರ್ ರಚನೆಯಾದ ಬಳಿಕ ನಡೆಯುತ್ತಿರುವ ಎರಡನೇ ಸಭೆ ಇದಾಗಿದೆ. ಮೊದಲ ಸಭೆ ಇತ್ತೀಚಿಗೆ ಹೈದರಾಬಾದ್ ನಲ್ಲಿ ನಡೆದಿತ್ತು. ಸಿಡಬ್ಲ್ಯುಸಿ 15 ಮಹಿಳಾ ಸದಸ್ಯರು ಮತ್ತು ಹಲವು ಹೊಸ ಮುಖಗಳನ್ನು ಒಳಗೊಂಡಂತೆ 39 ಸಾಮಾನ್ಯ ಸದಸ್ಯರು, 32 ಖಾಯಂ ಆಹ್ವಾನಿತರು ಮತ್ತು 13 ವಿಶೇಷ ಆಹ್ವಾನಿತರನ್ನು ಹೊಂದಿದೆ.ಅಕ್ಟೋಬರ್ 9ರಂದು ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮಧ್ಯ ಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸಗಡ ಹಾಗೂ ಮಿಜೋರಾಂ ವಿಧಾನಸಭೆಗಳಿಗೆ ನಡೆಯುವ ಚುನಾವಣಾ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ. ಪ್ರಚಾರದ ವೇಳೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲು ನಾಯಕರಿಗೆ ಸೂಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮ ಹಿನ್ನೆಲೆ ಡಿಸಿಎಂ ಡಿ.ಕೆ ಶಿವಕುಮಾರ್ ಸಿಡಬ್ಲ್ಯುಸಿ ತೆರಳುವುದಿಲ್ಲ ಎಂದು ಈಗಾಗಲೇ ತಿಳಿಸಿದ್ದಾರೆ.