#statecabnet meeting #H.K.Patil #compulsory retirement
ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಸಿಕ್ಕಿಬಿದ್ದ ಅಧಿಕಾರಿಗಳ ಆರೋಪ ಸಾಬೀತಾದರೆ ಕಡ್ಡಾಯ ನಿವೃತ್ತಿಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ.ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಲೋಕಾಯುಕ್ತ ಪ್ರಕರಣಗಳಲ್ಲಿ ತಪ್ಪಿತಸ್ಥರಾದ ಅಧಿಕಾರಿಗಳ ಮಾಹಿತಿಯನ್ನು ನೀಡಿದರು.ಅಲ್ಲದೇ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಪ್ರತ್ಯೇಕ ಸೈಬರ್ ನೀತಿ ರೂಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಾಯುಕ್ತ ಪ್ರಕರಣ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ.ಹೆಚ್.ನಾಗೇಶ್ ಅವರಿಗೆ 5 ವರ್ಷ ಶಿಕ್ಷೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ವಜಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ,ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ.ಉಷಾ ಕದರಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ ನಾಗಮಣಿ ಲೋಕಾಯುಕ್ತ ಟ್ರಾಪ್ ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿ ನಿರ್ಣಯ ಮಾಡಲು ನಿರ್ಧಾರ ಮಾಡಲಾಗಿದೆ.ಪೋ ಕೇಸಿನಲ್ಲಿ ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್ ಹಳ್ಳಿಗುಡಿ ಅವರನ್ನು ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ.