Revenue Facts

ಉದ್ಯಮ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಆಧುನಿಕ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಿರುವ ಕೌಶಲ್ಯಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಉದ್ಯಮ ಜಗತ್ತಿಗೆ ಕೌಶಲ್ಯಾಧಾರಿತ ಯುವ ಸಮೂಹ ಸೃಷ್ಟಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬೆಂಗಳೂರಿನಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ಶಿಕ್ಷಣ ಕುರಿತ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಕ್ಷೇತ್ರದ ಬೆಳವಣಿಗೆ ಮತ್ತು ಪ್ರಗತಿಗೆ ಅಗತ್ಯವಿರುವ ಎಲ್ಲ ಸಹಕಾರ ಮತ್ತು ನೆರವು ನೀಡುತ್ತದೆ. ಸಮಾಜದ ಪ್ರಗತಿಗೆ ಕಾರ್ಪೊರೇಟ್ ಸಂಸ್ಥೆಗಳು ಮತ್ತು ಉದ್ಯಮ ವಲಯ ಸರ್ಕಾರದ ಜೊತೆ ಕೈಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಸಮಾಜ ಮತ್ತು ಉದ್ಯಮದ ಆರೋಗ್ಯಕರ ಪ್ರಗತಿಗೆ ಕರೆ ನೀಡಿದರು.ಶ್ರೀಮಂತರು ಮತ್ತು ಬಡವರ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ನಾವು ಸಾರ್ವತ್ರಿಕ ಮೂಲ ಆದಾಯದ ತತ್ವದ ಅಡಿಯಲ್ಲಿ ಐದು ಖಾತರಿಗಳನ್ನು ಜಾರಿಗೆ ತಂದಿದ್ದೇವೆ. ಈ ಆಶಯದಡಿ ಬಜೆಟ್ ಸಿದ್ಧಪಡಿಸಿದ್ದೇವೆ ಎಂದರು.ಎಲ್ಲಾ ಜಾತಿಗಳು, ಎಲ್ಲಾ ಧರ್ಮಗಳು ಮತ್ತು ಎಲ್ಲಾ ವರ್ಗಗಳಿಗೆ ಅನ್ವಯವಾಗುವ ಐದು ಖಾತರಿಗಳನ್ನು ನಾವು ರೂಪಿಸಿದ್ದೇವೆ. ಇದು ಆರ್ಥಿಕತೆಗೆ ಹೊಸ ಚೈತನ್ಯ ಮತ್ತು ಬಲವನ್ನು ನೀಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಗೋವಿಂದರಾಜ್ ಉಪಸ್ಥಿತರಿದ್ದರು.

Exit mobile version