Revenue Facts

ರಾಜ್ಯದಲ್ಲಿ ಜೆಎನ್​​1 ರೂಪಾಂತರಿ ಕೊರೋನಾ ಭೀತಿ ಹೊಸ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಜೆಎನ್​​1 ರೂಪಾಂತರಿ ಕೊರೋನಾ ಭೀತಿ ಹೊಸ ಮಾರ್ಗಸೂಚಿ ಬಿಡುಗಡೆ

#JN1 Mutation #Corona #Fear #New Guidelines Released # State

ಬೆಂಗಳೂರು: ಕೊರೋನಾ ತೆಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಪ್ರಸ್ತುತ, ದೇಶದ ಕೋವಿಡ್ – 19ನ ಅಂಕಿ-ಅಂಶಗಳು, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19 ನ ಉಪತಳಿ IN.1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ರಣದೀಪ್ ಅವರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ವಿಧಿಸುವುದಿಲ್ಲ ಎಂದು ತಿಳಿಸಿದ್ದಾರೆ. ಕೋವಿಡ್ – 19 ರಾಜ್ಯ ತಾಂತ್ರಿಕ ಸಲಹಾ ಸಮಿತಿ 202ನೇ ಸಭೆಯ ಶಿಫಾರಸಿನ ಅನ್ವಯ ಈ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.

2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.

3. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.

4. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ .

5.ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು,ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ

6.ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು,ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು

7.ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ,ಡಿ.3, 4ನೇ ವಾರದಲ್ಲಿ ಮಾಕ್ ಡ್ರಿಲ್‌ ಮುಕ್ತಾಯಗೊಳಿಸಲು ಸೂಚನೆ

8.ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಕೋವಿಡ್ 19ನ ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲಾ ಅಂಶಗಳನ್ನು ಲಭ್ಯ ಮಾಧ್ಯಮಗಳ ಮೂಲಕ ಪ್ರಚುರಪಡಿಸುವಂತೆ ಸೂಚಿಸಿದ್ದು ಹಾಗೂ ಸಾರ್ವಜನಿಕರಲ್ಲಿ ಇವುಗಳನ್ನು ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳ ಜವಾಬ್ದಾರಿಯಾಗಿರುತ್ತದೆ.

Exit mobile version