ಬೆಂಗಳೂರು (ಜೂ.10): ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ಕಳೆದ ವರ್ಷ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆ ವೇಳೆ ಕೊರೋನಾ ನಿಯಮಗಳ ಉಲ್ಲಂಘಿಸಿದ ಮತ್ತು ಸಾಂಕ್ರಾಮಿಕ ರೋಗಗಳನ್ನು ಹರಡುವಿಕೆ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ದೂರು ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಇದೇ ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕನಕಪುರ ಟೌನ್ ಠಾಣಾ ಪೊಲೀಸರು ಮತ್ತು ಬೆಂಗಳೂರಿನ ಹಲಸೂರು ಠಾಣಾ ಪೊಲೀಸರು ದಾಖಲಿಸಿದ್ದ ಪ್ರತ್ಯೇಕ ಎರಡು ಪ್ರಕರಣಗಳ ಮುಂದಿನ ಕಾನೂನು ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
ಮತ್ತೊಂದೆಡೆ ‘ಪ್ರಜಾಧ್ವನಿ’ ಯಾತ್ರೆ ನಡೆಸುವ ವೇಳೆ ಮಂಡ್ಯದಲ್ಲಿ 500 ನೋಟು ಕಾರ್ಯಕರ್ತರತ್ತ ಬಿಸಾಡಿದ ಪ್ರಕರಣ ಸಂಬಂಧ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರ್ಜಿಯನ್ನು ಡಿ.ಕೆ.ಶಿವಕುಮಾರ್ ಹಿಂಪಡೆದುಕೊಂಡಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷವು 2022ರ ಜ.9ರಿಂದ 10 ದಿನ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಲ್ಲದೆ, ಸಾಂಕ್ರಾಮಿಕ ರೋಗ ಹರಡಲು ಕಾರಣವಾದ ಆರೋಪದ ಮೇಲೆ ನೈಸರ್ಗಿಕ ವಿಪತ್ತು ನಿರ್ವಹಣೆ ಕಾಯ್ದೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಡಿ.ಕೆ. ಶಿವಕುಮಾರ್ ವಿರುದ್ಧ ಉಪ್ಪಾರಪೇಟೆ, ಹಲಸೂರು ಗೇಟ್ ಮತ್ತು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಈ ಎಲ್ಲ ದೂರುಗಳನ್ನು ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಡಿ.ಕೆ. ಶಿವಕುಮಾರ್ ಪರವಾಗಿ ವಕೀಲ ಅರ್ನವ್ ಬಗಲವಾಡಿ ವಾದ ಮಂಡಿಸಿದ್ದರು.