ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನೇಮಕಾತಿ, ಬಡ್ತಿಗೆ ತಡೆ ನೀಡಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಆದೇಶ ಹೊರಡಿಸಿದ್ದಾರೆ.
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೀಸಲಾತಿ ಹೆಚ್ಚಳಕ್ಕೆ ಅನುಗುಣವಾಗಿ ರೋಸ್ಟರ್ ಬಿಂದುಗಳನ್ನು ಗುರುತಿಸುವವರೆಗೂ ಎಲ್ಲಾ ಇಲಾಖೆಗಳ ನೇರ ನೇಮಕಾತಿ, ಬಡ್ತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
“ಮೀಸಲಾತಿ ಹೆಚ್ಚಳಕ್ಕೆ ಅನುಗುಣವಾಗಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿ ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಇದು ಅಂತಿಮಗೊಂಡು ಪ್ರಕಟಿಸುವವರೆಗೂ ಎಲ್ಲಾ ನೇರ ನೇಮಕಾತಿಗಳನ್ನು ತಡೆಹಿಡಿಯಬೇಕು. ಮೀಸಲಾತಿ ಅನ್ವಯವಾಗುವ ಹುದ್ದೆಗಳಿಗೆ ಬಡ್ತಿ ನೀಡಲು ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸಬಾರದು,” ಎಂದು ವಂದಿತಾ ಶರ್ಮಾ ಅವರು ಸೂಚನೆ ನೀಡಿದ್ದಾರೆ.
ಈ ಸಂಬಂಧ ಅವರು ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯರ್ಶಿಗಳು, ಹಾಗೂ ಕಾರ್ಯದರ್ಶಿಗಳಿಗೆ ಟಿಪ್ಪಣಿ ರವಾನಿಸಿದ್ದಾರೆ.