ಬೆಂಗಳೂರು ಸೆ. 20: ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ಸರಬರಾಜು ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಈ ಕುರಿತು ಸುತ್ತೋಲೆ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು, ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಕಾರ್ಯ ಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಹಂಚಿಕೆ ಬದಲು ಸ್ಟೀಲ್ ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ.
ಈಗಾಗಲೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಬಳಕೆ ನಿಷೇಧಿಸಿ ಆದೇಶಿಸಲಾಗಿತ್ತು. ಆದರೆ ಈ ಆದೇಶ ಪಾಲಿಸದೇ ಗಾಳಿಗೆ ತೂರುತ್ತಿರುವುದು ಸಮರ್ಥನೀಯವಲ್ಲ. ಸರ್ಕಾರಿ ನಿಗಮ, ವಿಶ್ವ ವಿದ್ಯಾಲಯ ಅನುದಾನಿತ ಸಂಸ್ಥೆಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ವಿತರಿಸುತ್ತಿರುವುದು ಸರಿಯಲ್ಲ. ಇನ್ನು ಮುಂದೆ ನಡೆಯುವ ಸರ್ಕಾರಿ ಕಾರ್ಯ ಕ್ರಮಗಳಲ್ಲಿ ಪ್ಲಾಸ್ಟಿಕ್ ಬದಲಿಗೆ ಸ್ಟೀಲ್ ಅಥವಾ ಗಾಜಿನ ಇನ್ನಿತರೆ ಬಾಟಲಿ ಗಳಲ್ಲಿ ನೀರನ್ನು ಪೂರೈಕೆ ಮಾಡಬೇಕು. ತಪ್ಪಿದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.