Revenue Facts

ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರಗಳ ಸುತ್ತಲು ಪ್ರತಿಬಂಧಕಾಜ್ಞೆ ಜಾರಿ

ಬೆಂಗಳೂರು, ಮೇ. 19 : ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಇದೇ ತಿಂಗಳು 20 ಹಾಗೂ 21 ರಂದು ನಡೆಯಲಿದೆ. ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶಕ್ಕೆ ಅನ್ವಯಿಸುವಂತೆ ನಿಷೇಧಾಜ್ಞೆ ಹೊರಡಿಸುವ ಅಗತ್ಯವಿದೆ. ಹಾಗಾಗಿ ಇದೇ ತಿಂಗಳು 18 ರಿಂದ ನಿಷೇಧಾಜ್ಞೆಯನ್ನು ಹೊರಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ 20-05-2023 ರಂದು ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 03-50 ಗಂಟೆವರೆಗೆ ಮತ್ತು ದಿನಾಂಕ: 21-05-2023 ರಂದು ಬೆಳಿಗ್ಗೆ 9-00 ಗಂಟೆಯಿಂದ ಮಧ್ಯಾಹ್ನ 03-50 ಗಂಟೆವರೆಗೆ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.

ಸದರಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಬೆಂಗಳೂರು ನಗರದ ವಿಶೇಷ ಪೊಲೀಸ್ ಆಯುಕ್ತರು, ಸಂಚಾರ ಮತ್ತು ಪೊಲೀಸ್ ಆಯುಕ್ತರು ಆಗಿರುವ ಡಾ|| ಎಂ.ಎ. ಸಲೀಂ ಅವರು ಆದೇಶವನ್ನು ಹೊರಡಿಸಿದ್ದಾರೆ. ಹಾಗೆಯೇ ಮಾರ್ಗಸೂಚಿ ಅನ್ವಯ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಹಾಗೂ ಪ್ರಶ್ನೆ ಪತ್ರಿಕೆ ರವಾನೆ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಈಗಾಗಲೇ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ, ಅಧಿಕಾರಿಗಳಿಗೆ ಮಾರ್ಗಸೂಚಿಗಳ ಮಾಹಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯ ಪರಿಶೀಲಿಸಬೇಕು ಎಂದು ಸೂಚನೆ ನೀಡಲಾಗಿದೆ.

Exit mobile version