ಬೆಂಗಳೂರು, ಏ. 28 : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಎಲ್ಲಾ ಪಕ್ಷಗಳ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಈಗಾಗಲೇ ನಾಲ್ಕು ಗ್ಯಾರಂಟಿ ಘೋಷಣೆಗಳನ್ನು ಮಾಡಿದ್ದಾರೆ. ತಮ್ಮ ಐದನೇ ಗ್ಯಾರಂಟಿ ಘೋಷಣೆಯನ್ನು ಮಾಡಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದರೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವುದಾಗಿ ಘೋಷಿಸಿದ್ದಾರೆ.
ಈ ಹಿಂದೆಯೇ ಕಾಂಗ್ರೆಸ್ ಪಕ್ಷ ಗೃಹಜ್ಯೋತಿ – 200 ಯೂನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ – ಪ್ರತಿ ಮನೆ ಯಜಮಾನಿಗೆ ಮಾಸಿಕ 2000 ರೂ., ಅನ್ನಭಾಗ್ಯ- ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ, ಯುವ ನಿಧಿ – ಪದವೀಧರರಿಗೆ 3000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಣೆಗಳನ್ನು ಮಾಡಿದ್ದಾರೆ. ಉಡುಪಿಯಲ್ಲಿ ನಡೆದ ಕಾಂಗ್ರಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು ಇದೀಗ 5ನೇ ಘೋಷಣೆಯನ್ನು ಮಾಡಿದ್ದಾರೆ.
ಸಾರ್ವಜನಿಕ ಬಸ್ ಗಳಲ್ಲಿ ರಾಜ್ಯದ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಅವಕಾಶವನ್ನು ಮಾಡಿಕೊಡಲಾಗುವುದು. ಈ ಐದೂ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂದು ಅವರು ಹೇಳಿದರು. ನಂತರ ರಾಹುಲ್ ಗಾಂಧಿ ಕಾಪು ವಿಧಾನಸಭಾ ಕ್ಷೇತ್ರದ ಉಚ್ಚಿಲ ಎಂಬಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲಿ ಮೀನುಗಾರರಿಗೆ ಕೊಡುಗೆ ಘೋಷಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಮೀನುಗಾರರಿಗೆ ಹತ್ತು ಲಕ್ಷ ರೂಪಾಯಿ ಜೀವ ವಿಮೆ ನೀಡುವುದಾಗಿ ಹೇಳಿದರು. ಜೊತೆಗೆ ಮೀನುಗಾರ ಮಹಿಳೆಯರಿಗೆ 1 ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲವನ್ನು ಹಾಗೂ 25 ರೂಪಾಯಿ ಸಬ್ಸಿಡಿಯೊಂದಿಗೆ 500 ಲೀಟರ್ ಡೀಸೆಲ್ ವಿತರಿಸುತ್ತೇವೆ ಎಂದು ರಾಹುಲ್ ಗಾಂಧಿ ಅವರು ಹೇಳಿದರು.