#Supreme order # release #Cauvery water # Tamil Nadu # Mandya bandh # September 23
ಮಂಡ್ಯ;ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಸೆ. 23 ರಂದು (ಶನಿವಾರ) ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ. ಇದೀಗ ನಡೆದ ಮಂಡ್ಯ ಜಿಲ್ಲೆ ರೈತ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮಂಡ್ಯ ಜಿಲ್ಲಾ ಬಂದ್ ನಡೆಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ನಾಳೆ ರಾಜಕೀಯ ಪಕ್ಷಗಳ ನಾಯಕರು, ವರ್ತಕರು ಮತ್ತು ಸಂಘಟನೆ ಮುಖಂಡರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಜಿಲ್ಲಾ ಬಂದ್‌ನ ರೂಪುರೇಷೆ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ.ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದ ವಿವಿಧ ಕಡೆ ರೈತರು, ಕನ್ನಡ ಪರ ಸಂಘಟನೆ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ವಿವಿಧೆಡೆ ಪ್ರತಿಭಟನೆ;ಕಾವೇರಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಕೃಷ್ಣರಾಜಸಾಗರ ಜಲಾಶಯದ ಬಳಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಡ್ಯಾಂನ ಮುಖ್ಯ ದ್ವಾರದಲ್ಲಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ.ಈ ನಡುವೆ ಸುಪ್ರೀಂ ಕೋರ್ಟ್ ತೀರ್ಪು ನೀಡುತ್ತಿದ್ದಂತೆಯೇ ಮಂಡ್ಯದಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ.ಕೆಆರ್‍ಎಸ್ ಪಕ್ಷದಿಂದ ಪ್ರತಿಭಟನೆ ನಡೆಯುತ್ತಿದೆ. ಬೈಕ್ ರ್ಯಾಲಿ ಮೂಲಕ ಆಕ್ರೋಶ ಹಾಕುತ್ತಿದ್ದಾರೆ. ಇನ್ನೊಂದೆಡೆ ರೈತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿವೆ. ಅಲ್ಲದೆ ಸುಪ್ರೀಂಕೋರ್ಟ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿವೆ.ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಅವೈಜ್ಞಾನಿಕ ತೀರ್ಪು ನೀಡಿದೆ. ಸರ್ಕಾರ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ಆಗ್ರಹಿಸಿದರು.ರೈತ ಸಂಘದ ಭಾವುಟ ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದಂತೆ ರೈತರು ಒತ್ತಾಯಿಸಿದ್ದಾರೆ.